ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿರುವ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನು ಪುನಾರಚಿಸಿ, ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಗೆ ಸೀಮಿತಗೊಳಿಸಲು ಸರ್ಕಾರ ಉದ್ದೇಶಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದ್ದು ನಿಜಕ್ಕೂ ಇದೊಂದು ಮಹಿಳಾ ವಿರೋಧಿ ನಡೆಯಾಗಿದೆ. ಸರ್ಕಾರದ ನಡೆ ಖಂಡನೀಯವಾಗಿದೆ ಎಂದು ವಿಜಯಪುರದ ಯುವ ಹೋರಾಟಗಾರ ನ್ಯಾಯವಾದಿ ಶ್ರೀನಾಥ್ ಪೂಜಾರಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಶ್ರೀನಾಥ್ ಪೂಜಾರಿ, ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಕೇಳಿದ ಪ್ರಶ್ನೆಗೆ ವಿಧಾನ ಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು, ವಿಶ್ವವಿದ್ಯಾಲಯವನ್ನು ಮುಚ್ಚುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ. ಆದರೆ, ವಿಜಯಪುರದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಪುನಾರಚಿಸು ಹಾಗೂ ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಂದಿಗೆ ಸಂಯೋಜನೆಗೊಳಿಸಿ, ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಸಚಿವರ ಹೇಳಿಕೆ ನಿಜಕ್ಕೂ ಇದೊಂದು ಮಹಿಳಾ ವಿರೋಧಿ ನಡೆಯಾಗಿದೆ. ಇದರ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಶ್ರೀನಾಥ್ ಪೂಜಾರಿ ತಿಳಿಸಿದ್ದಾರೆ.
ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಮಾಡಲಾಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಈ ಹಿಂದೆಯೇ ದಲಿತ ವಿದ್ಯಾರ್ಥಿ ಪರಿಷತ ಅಧ್ಯಕ್ಷ ಮತ್ತು ನ್ಯಾಯವಾದಿ ಶ್ರೀನಾಥ ಪೂಜಾರಿ ಈ ಹಿಂದೆಯೇ ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಆಗ, ಸರಕಾರದ ಪ್ರತಿನಿಧಿಗಳು ಆ ರೀತಿ ಯಾವುದೇ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಆದರೆ, ಈಗ ಸರಕಾರವೇ ಮಹಿಳಾ ವಿಶ್ವವಿದ್ಯಾಲಯವನ್ನು ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಮಾಡುವ ಉದ್ದೇಶ ಹೊಂದಿರುವುದು ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.