ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಟೀಂ ಇಂಡಿಯಾ 1-0 ಅಂತರದಿಂದ ಗೆದ್ದುಕೊಂಡಿದೆ. ನೇಪಿಯರ್‌ನಲ್ಲಿ ನಡೆದ ಮೂರನೇ ಟಿ20 ಪಂದ್ಯ ಮಳೆಯ ಕಾರಣದಿಂದ ಟೈ ಆಗಿದೆ. ಮೊದಲ ಪಂದ್ಯವೂ ಮಳೆ ಪಾಲಾಗಿತ್ತು, ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 65 ರನ್‌ಗಳಿಂದ ಜಯಗಳಿಸಿತ್ತು. ಹಾಗಾಗಿ ಹಾರ್ದಿಕ್ ಪಾಂಡ್ಯ ನಾಯಕತ್ವದ ಭಾರತ ತಂಡ 1-0 ಯಿಂದ ಸರಣಿ ಕೈವಶ ಮಾಡಿಕೊಂಡಿದೆ.
ನೇಪಿಯರ್‌ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ನಾಯಕ ಟಿಮ್ ಸೌಥಿ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ವೈದ್ಯಕೀಯ ನೇಮಕಾತಿಯಿಂದಾಗಿ ಕೇನ್ ವಿಲಿಯಮ್ಸನ್ ಬದಲು ಟಿಮ್ ಸೌಥಿ ತಂಡದ ನೇತೃತ್ವ ವಹಿಸಿಕೊಂಡಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 160 ರನ್‌ಗಳಿಗೆ ಆಲೌಟ್ ಆಯ್ತು. ಭಾರತದ ಪರ ಅಬ್ಬರದ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 4 ವಿಕೆಟ್ ಕಬಳಿಸಿದ್ರು.
ಸಾಧಾರಣ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ ಆರಂಭದಲ್ಲೇ ಸೂರ್ಯಕುಮಾರ್ ಯಾದವ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ರಿಷಭ್ ಪಂಥ್ ಕೂಡ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ರು. ಆದ್ರೆ ನಾಯಕ ಹಾರ್ದಿಕ್ ಪಾಂಡ್ಯ ಸಮಯೋಚಿತ ಆಟದ ಮೂಲಕ ತಂಡಕ್ಕೆ ಚೇತರಿಕೆ ನೀಡಿದ್ರು. ಭಾರತ 4 ವಿಕೆಟ್ ನಷ್ಟಕ್ಕೆ 75 ರನ್ ಗಳಿಸುವಷ್ಟರಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದರಿಂದ ಪಂದ್ಯವನ್ನ ಸ್ಥಗಿತಗೊಳಿಸಲಾಯ್ತು. ಡಕ್ವರ್ಥ್ ಲೂಯಿಸ್ ನಿಯಮದ ಪ್ರಕಾರ ಈ ಪಂದ್ಯ ಸಮಬಲದಲ್ಲಿ ಅಂತ್ಯಗೊಂಡಿದೆ.