ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ. 19 ಜಿಲ್ಲೆಗಳ 89 ವಿಧಾನಸಭೆ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 5 ರಂದು ಎರಡನೇ ಹಂತದಲ್ಲಿ ಉಳಿದ 93 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 5:30ರ ವರೆಗೆ ಮತದಾನ ನಡೆಯಲಿದ್ದು,
ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಜೊತೆಗೆ ಈ ಬಾರಿ ಆಮ್ ಆದ್ಮಿ ಪಕ್ಷ ಕೂಡ ಸೇರ್ಪಡೆ ಯಾಗಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಆಮ್ ಆದ್ಮಿ ಪಕ್ಷ 88 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದಾರೆ. ಮೊದಲ ಹಂತದಲ್ಲಿ 1.24 ಕೋಟಿ ಪುರುಷರು ಮತ್ತು 1.15 ಕೋಟಿ ಮಹಿಳಾ ಮತದಾರರು ಸೇರಿದಂತೆ 2.39 ಕೋಟಿ ಅರ್ಹ ಮತದಾರರಿದ್ದಾರೆ.