Spread the love

ಬೆಂಗಳೂರು : ಕ್ರೀಡಾ ಇಲಾಖೆಯ ಅಪರಮುಖ್ಯಕಾರ್ಯದರ್ಶಿಗಳ ನೇತೃತ್ವದ ಆಯ್ಕೆ ಸಮಿತಿಯ ಮೂಲಕ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಮುಂದಿನ ಸಚಿವಸಂಪುಟದಲ್ಲಿ ಅನುಮೋದನೆ ನೀಡಿ, ಪದವೀಧರರಾದ ಒಲಂಪಿಕ್ಸ್ ಹಾಗೂ ಪ್ಯಾರಾಒಲಂಪಿಕ್ಸ್ ಪದಕವಿಜೇತರಿಗೆ ಗ್ರೂಪ್ ಎ ಉದ್ಯೋಗ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರೊಂದಿಗೆ ಏಕಲವ್ಯ ಕ್ರೀಡಾ ಪ್ರಶಸ್ತಿ ಹಾಗೂ ಇತರ ಕ್ರೀಡಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿ, ಪದವೀಧರರಾಗಿರುವ ಏಷಿಯನ್ ಗೇಮ್ಸ್ ಹಾಗೂ ಕಾಮನ್ ವೆಲ್ತ್ ಪದಕ ವಿಜೇತರಿಗೆ ಗ್ರೂಪ್ ಬಿ ಉದ್ಯೋಗ, ಇದಕ್ಕಿಂತ ಕಡಿಮೆ ಸ್ತರದ ಕ್ರೀಡಾಕೂಟದ ಪದಕವಿಜೇತರಿಗೆ ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಉದ್ಯೋಗವನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಸರ್ಕಾರದ ಉದ್ಯೋಗ ನೀಡುವ ನೀತಿ ಕರ್ನಾಟಕದ ಹೊರತು ಬೇರೆ ಯಾವುದೇ ರಾಜ್ಯದಲ್ಲಿಲ್ಲ ಎಂದರು.

ರಾಜ್ಯ ಸರ್ಕಾರದಿಂದ 75 ಕ್ರೀಡಾಪಟುಗಳಿಗೆ ತರಬೇತಿ

ಕಳೆದ ಆಗಸ್ಟ್ 15 ರಂದು 75 ಕ್ರೀಡಾಪಟುಗಳನ್ನು ದತ್ತುಪಡೆದು, ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ತರಬೇತಿ ನೀಡಲಾಗುತ್ತಿದೆ. 4 ವರ್ಷದ ತರಬೇತಿ, ಉತ್ತಮ ತರಬೇತಿದಾರರು, ಶಾಲಾ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 10 ಲಕ್ಷ ವಿನಿಯೋಗಿಸಲಾಗಿದ್ದು, ಅವಶ್ಯಕತೆಗೆ ಅನುಸಾರ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ಕ್ರೀಡಾಪಟುಗಳು ಉತ್ತಮ ಸಾಧನೆಗಳನ್ನು ಮಾಡಬೇಕು ಎಂದರು.

ಕ್ರೀಡೆ ರಾಷ್ಟ್ರೀಯ ಸಂಕೇತವಾಗುತ್ತಿದೆ

ಯುವ ಕ್ರೀಡಾ ಪ್ರತಿಭೆಗಳು ದೇಶದ ಆಸ್ತಿ. ಏಕಾಗ್ರತೆ, ಹಾಗೂ ಪರಿಶ್ರಮದಿಂದ ಸಾಧನೆ ಮಾಡಿದರೆ ಯಶಸ್ಸು ಖಂಡಿತ ಲಭಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರೀಡೆಗೆ ಮಹತ್ವವನ್ನು ನೀಡಿದೆ. ಕ್ರೀಡೆ ಹವ್ಯಾಸವಾಗಿ ಪ್ರಾರಂಭವಾಗಿ ರಾಷ್ಟ್ರೀಯ ಸಂಕೇತವಾಗಿ ಇತ್ತೀಚೆಗೆ ಪರಿಗಣಿಸಲಾಗುತ್ತಿದೆ.ಒಂದು ರಾಷ್ಟ್ರವನ್ನು ಅದರ ಕ್ರೀಡಾ ಸಾಧನೆಯ ಮೇಲೆ ಗುರುತಿಸಲಾಗುತ್ತಿದೆ. ಭಾರತದಂತಹ ರಾಷ್ಟ್ರದಲ್ಲಿ ಕ್ರೀಡೆಯನ್ನು ಮುಖ್ಯವಾಹಿನಿಗೆ ತರಲು ಪ್ರಧಾನಿ ಮೋದಿಯವರು ಯಶಸ್ವಿ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಖೇಲೋ ಇಂಡಿಯಾ, ಫಿಟ್ ಇಂಡಿಯಾ, ಜೀತೋ ಇಂಡಿಯಾ ಎಂಬ ಕಾರ್ಯಕ್ರಮಗಳ ಮೂಲಕ ಕ್ರೀಡೆಗಳ ಬಗ್ಗೆ ಜಾಗೃತಿ ಮೂಡಿದೆ. ಇದರ ಪರಿಣಾಮವಾಗಿ ಹಿಂದಿನ ಒಲಂಪಿಕ್ಸ್ ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವಂತಾಯಿತು. ಪ್ಯಾರಾ ಒಲಂಪಿಕ್ಸ್ ನಲ್ಲಿಯೂ ಭಾರತ ಮಹತ್ತರ ಸಾಧನೆಗಳನ್ನು ಮಾಡಿದೆ. ಇದಕ್ಕಾಗಿ ಎಲ್ಲ ಕ್ರೀಡಾಸಾಧಕರನ್ನು ಅಭಿನಂದಿಸುತ್ತೇನೆ ಎಂದರು.


Spread the love