ಬೆಂಗಳೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 23ನೇ ಸಾಮಾನ್ಯ ಸಭೆ ತೀರ್ಮಾನಿಸಿದೆ.
ಇದರ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಬೇಕೆಂಬ ಎನ್‌ಇಪಿ ಆಶಯವನ್ನು ಸಾಧಿಸಲು ಯುಜಿಸಿ ಸೂಚನೆಯಂತೆ ಎಲ್ಲ ವಿಷಯಗಳಿಗೆ ಸಂಬಂಧಿಸಿದ ಗುಣಮಟ್ಟದ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದರ ರೂಪುರೇಷೆಯನ್ನು ತೀರ್ಮಾನಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಸಭೆಯ ಬಗ್ಗೆ ಮಾತನಾಡಿದ ಅವರು, ಉನ್ನತ ಶಿಕ್ಷಣದ ಹಂತದಲ್ಲಿ ಕನ್ನಡದ ಬಳಕೆಯನ್ನು ಗರಿಷ್ಠ ಪ್ರಮಾಣದಲ್ಲಿ ಉತ್ತೇಜಿಸಲು ಕೂಡ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ, ಹೊಸದಾಗಿ ಬುಡಕಟ್ಟು ವಿಶ್ವವಿದ್ಯಾಲಯದ ಸ್ಥಾಪನೆಯ ಬದಲಿಗೆ ಈಗಾಗಲೇ ಅಸ್ತಿತ್ವದಲ್ಲಿರುವ ಕರ್ನಾಟಕ ರಾಜ್ಯ ಜಾನಪದ ವಿ.ವಿ.ಯಲ್ಲೇ ಬುಡಕಟ್ಟು ಅಧ್ಯಯನಕ್ಕೂ ಸಮರ್ಪಕ ವ್ಯವಸ್ಥೆ ಮಾಡಲಾಗುವುದು ಎಂದು ವಿವರಿಸಿದ್ದಾರೆ.