Spread the love

ಯಾದಗಿರಿ: ಕಲುಷಿತ ನೀರು ಸೇವಿಸಿ ಯಾದಗಿರಿಯ ಗುರುಮಿಠಕಲ್ ತಾಲೂಕಿನ ಅನಾಪುರದಲ್ಲಿ ಮೂರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಲೋಕಾಯುಕ್ತ ನ್ಯಾಯಮೂರ್ತಿಗಳು ತನಿಖೆಗೆ ಆದೇಶ ನೀಡಿದ್ದಾರೆ.

ಕಲುಷಿತ ನೀರು ಸೇವಿಸಿ ಮೂವರು ಮಹಿಳೆಯರು ಸಾವನ್ನಪ್ಪಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್, ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡು ತನಿಖೆಗೆ ಆದೇಶಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶುದ್ಧ ನೀರು ಸರಬರಾಜು ಮಾಡುವುದು ಗ್ರಾಮ ಪಂಚಾಯಿತಿಗಳ ಮೂಲಭೂತ ಕರ್ತವ್ಯ. ಶುದ್ಧ ನೀರು ನೀಡುವಲ್ಲಿ ವಿಫಲರಾದರೆ ಅದು ಮೂಲಭೂತ ಹಕ್ಕುಗಳ ಉಲ್ಲಂಘನೆ. ಅಲ್ಲದೇ ಕರ್ನಾಟಕ ಲೋಕಾಯುಕ್ತ ಕಾಯ್ದೆ ಸೆಕ್ಷನ್ 2(1) ರ ಪ್ರಕಾರ ದುರಾಡಳಿತಕ್ಕೆ ಸಮನಾಗಿರುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

ಗುರುಮಿಠಕಲ್ ತಾಲೂಕಿನ ಅನಾಪುರ ಗ್ರಾಮದಲ್ಲಿ ಕಲುಷಿತ ನೀರಿಗೆ ಮೂವರು ಬಲಿಯಾಗಿದ್ದು, 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ.


Spread the love