ಬೆಂಗಳೂರು;- ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಅ.10ರಂದು ಕರ್ನಾಟಕ- ತಮಿಳುನಾಡು ಗಡಿ ಬಂದ್ ಮಾಡಿ ಚಳವಳಿ ನಡೆಸಲಾಗುವುದು ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು.
ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸದೇ ಹೋದರೆ ರೈತರು ಮತ್ತು ಕನ್ನಡಪರ ಹೋರಾಟಗಾರರು ಕರ್ನಾಟಕ- ತಮಿಳುನಾಡು ಸಂಪರ್ಕಿಸುವ ಹೊಸೂರು, ಚಾಮರಾಜನಗರ ಹಾಗೂ ಕನಕಪುರ ಗಡಿ ಭಾಗಗಳಲ್ಲಿ ಅ.10ರಂದು ಬಂದ್ ಮಾಡುವ ಮೂಲಕ ಚಳವಳಿ ನಡೆಸುತ್ತೇವೆ. ಈ ಬಗ್ಗೆ ಜೈಲಿಗೆ ಹೋಗಲೂ ಸಿದ್ಧ ಎಂದು ಘೋಷಿಸಿದರು. ಕಾವೇರಿ ವಿಚಾರದಲ್ಲಿ ತಮಿಳುನಾಡು ರಾಜಕಾರಣಿಗಳು ಕರ್ನಾಟಕದ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಬ್ಲಾಕ್ ಮೇಲ್ ಮಾಡುವುದನ್ನು ಬಿಡಬೇಕು. ಇಲ್ಲವಾದಲ್ಲಿ ಕನ್ನಡಿಗರಿಂದ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕೆಆರ್‌ಎಸ್ ಜಲಾಶಯ ಮುತ್ತಿಗೆ ಕಾರ್ಯಕ್ರಮಕ್ಕೆ ರೈತರು ಮತ್ತು ಕನ್ನಡ ಸಂಘಟನೆಗಳ ಹೋರಾಟಗಾರರು ಬೆಂಬಲ ನೀಡುತ್ತಿರುವುದು ನಮ್ಮ ಹೋರಾಟಕ್ಕೆ ಸ್ಪೂರ್ತಿ ತಂದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಸಚಿವರು ನರಸತ್ತ ಹೇಡಿಗಳಂತೆ ವರ್ತಿಸುತ್ತಿದ್ದಾರೆ.